ಬೀದರ್, ಜೂ. 22: ದಕ್ಷಿಣ ಕ್ಷೇತ್ರದ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ವ್ಯವಸ್ಥೆ, ಅಡುಗೆಮನೆ ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು.
ಪರಿಶೀಲನೆ ವೇಳೆ ವಿದ್ಯಾರ್ಥಿಗಳಿಗಾಗಿ ಸಂಗ್ರಹಿಸಿಟ್ಟಿದ್ದ ತೊಗರಿಬೇಳೆ, ಅಕ್ಕಿ, ಅಡುಗೆ ಎಣ್ಣೆ, ಶೇಂಗಾ, ಹೆಸರುಬೇಳೆ ಸೇರಿದಂತೆ ಹಲವು ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಸಂಬಂಧಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಘಟನೆಯ ಗಂಭೀರತೆಯನ್ನು ಮನಗಂಡ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ತಕ್ಷಣವೇ ಮೇಲಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದರು. ಅಲ್ಲದೆ, ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳು, ಸಿಬ್ಬಂದಿ ಅಥವಾ ಗುತ್ತಿಗೆದಾರರ ವಿರುದ್ಧ ಕಠಿಣ ಶಿಸ್ತು ಹಾಗೂ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರ ಮತ್ತು ಸಂಬಂಧಿತ ಇಲಾಖೆಯ ಜವಾಬ್ದಾರಿಯಾಗಿದೆ. ಮಕ್ಕಳ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು.
ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ನಿಯಮಿತ ತಪಾಸಣೆ ನಡೆಸಿ, ಯಾವುದೇ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನೆಯ ಬಳಿಕ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದ ಶಾಸಕ ಬೆಲ್ದಾಳೆ, ಅವರ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ಮೂಲಭೂತ ಸೌಲಭ್ಯಗಳು, ಆಹಾರದ ಗುಣಮಟ್ಟ ಮತ್ತು ವಸತಿ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಪರಿಷ್ಕರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.