ಕಲಬುರಗಿ|ಬರಗಾಲ ಘೋಷಣೆಗೆ ಆಗ್ರಹಿಸಿ ರೈತ ಸಂಘ ಧರಣಿ ಸತ್ಯಾಗ್ರಹ

 

ಕಲಬುರಗಿ, ಜೂ. 22: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಮುಂಗಾರು ಬಿತ್ತನೆ ಕುಂಠಿತಗೊಂಡಿದ್ದು, ರೈತರು ಹಾಗೂ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ತಕ್ಷಣ ಬರಗಾಲ ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಎಲ್ ನಿನೊ ಪರಿಣಾಮದಿಂದ ಬರಗಾಲದ ಛಾಯೆ ಆವರಿಸಿದೆ. ಇದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸಿದ್ದು, ಮೇವಿನ ಕೊರತೆಯಿಂದ ಜಾನುವಾರುಗಳಿಗೂ ತೊಂದರೆ ಉಂಟಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬರಗಾಲ ಕಾಮಗಾರಿಗಳನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ ಮಹಿಳೆಯರು ತಲೆಯ ಮೇಲೆ ಬುಟ್ಟಿ ಹಾಗೂ ಸಲುಕೆಗಳನ್ನು ಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿಯಲ್ಲಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು, ವಿವಿಜಿ ರಾಮಜಿ ಯೋಜನೆಯನ್ನು ರದ್ದುಪಡಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಮುಂದುವರಿಸಬೇಕು ಹಾಗೂ ಭಂಕೂರ ಗ್ರಾಮದ ಸುಮಾರು 2,000 ಜನರಿಗೆ ಉದ್ಯೋಗ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

ಧರಣಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಉಪಾಧ್ಯಕ್ಷ ಕ್ಷೇಮಲಿಂಗ ನರೋಣಾ, ನಾಗೇಂದ್ರ ಕಂಟಿ, ಸಹ ಕಾರ್ಯದರ್ಶಿಗಳಾದ ಸಿದ್ದಮ್ಮ ದೇವನ್, ದಿಲೀಪ್ ನಾಗೂರ, ಸಾವಿತ್ರಿ ಮಾಲಗತ್ತಿ, ಸಾಯಬಣ್ಣಾ ಕೊರಬಾ, ದೇವಾನಂದ ಸೇರಿದಂತೆ ಹಲವರು ಭಾಗವಹಿಸಿದ್ದರು.

Share This Article
Leave a Comment