ಕಾರಂಜಾ ಸಂತ್ರಸ್ತ ರೈತರ ಹೋರಾಟಕ್ಕೆ ತಾರ್ಕಿಕ ಅಂತ್ಯಕ್ಕೆ ದಾರಿ

ಶೀಘ್ರವೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಸಾಧ್ಯತೆ

ಬೀದರ್, ಏ.೧೮: ಕಾರಂಜಾ ಜಲಾಶಯದ ಮುಳುಗಡೆ ಸಂತ್ರಸ್ತ ರೈತರ ದಶಕಗಳ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆ ಮೂಡಿದ್ದು, ಈ ಸಂಬಂಧ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯುವ ಸಾಧ್ಯತೆ ವ್ಯಕ್ತವಾಗಿದೆ.

ಈ ಹಿನ್ನೆಲೆ ‘ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ’ಯ ಪದಾಧಿಕಾರಿಗಳ ಮಹತ್ವದ ಸಮಾಲೋಚನಾ ಸಭೆ ಶನಿವಾರ ನಗರದಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಹೋರಾಟದ ಕಾರ್ಯತಂತ್ರ, ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಹಾಗೂ ಬೆಂಗಳೂರಿನಲ್ಲಿ ನಡೆಯಲಿರುವ ಸಭೆಗೆ ರೈತ ಪ್ರತಿನಿಧಿಗಳನ್ನು ಸಿದ್ಧಪಡಿಸುವ ಕುರಿತು ಚರ್ಚಿಸಲಾಯಿತು.

ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ತ ರೈತರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದರಿಂದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ.

ಸಭೆಯನ್ನುದ್ದೇಶಿಸಿ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿ, ದೀರ್ಘಕಾಲದಿಂದ ನಡೆಯುತ್ತಿರುವ ಹೋರಾಟಕ್ಕೆ ಈಗ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ವಿಶೇಷ ಕಾಳಜಿಯಿಂದ ಮುಖ್ಯಮಂತ್ರಿ ಭೇಟಿಗೆ ಅವಕಾಶ ದೊರೆತಿದೆ. ಈಗಾಗಲೇ ಮುಖ್ಯಮಂತ್ರಿ ರೈತ ಮುಖಂಡರೊಂದಿಗೆ ಎರಡು ಬಾರಿ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಶೀಘ್ರದಲ್ಲೇ ಸಚಿವರೊಂದಿಗೆ ಚರ್ಚಿಸಿ ರೈತ ಪ್ರತಿನಿಧಿಗಳನ್ನು ಬೆಂಗಳೂರಿಗೆ ಆಹ್ವಾನಿಸಿ ಅಂತಿಮ ಸಭೆ ನಡೆಸುವ ನಿರೀಕ್ಷೆಯಿದೆ. ಸಭೆಯ ದಿನಾಂಕ ನಿಗದಿ ಹಾಗೂ ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಲು ಸಮಿತಿ ಪದಾಧಿಕಾರಿಗಳು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು.

ಸಭೆಯಲ್ಲಿ ವಿನಯಕುಮಾರ್ ಮಾಳಗೆ, ರೋಹನ್ ಕುಮಾರ್, ಮಹೇಶ್ ಗೋರನಾಳ್ಕರ್, ರಾಜಪ್ಪ ಕಮಾಲ್ಪುರೆ, ರಾಜಶೇಖರ ಖೇಣಿ ರಂಜೋಳ, ಮಾದಪ್ಪ ಸಂಗೋಳಗಿ, ಸಂಗಾರೆಡ್ಡಿ, ರೇವಣಪ್ಪ, ಲಕ್ಷ್ಮೀ ಮಾದಪ್ಪ ಹಾಗೂ ವಿದ್ಯಾವತಿ ಸಂಗಾರೆಡ್ಡಿ ಸೇರಿದಂತೆ ಅನೇಕ ರೈತ ಮುಖಂಡರು ಮತ್ತು ಪ್ರತಿನಿಧಿಗಳು ಉಪಸ್ಥಿತರಿದ್ದರು.

Share This Article
Leave a Comment