ಕಲಬುರಗಿ, ಮೇ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಂಯುಕ್ತ ಆಶ್ರಯದಲ್ಲಿ ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಫಜಲಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಮಹಿಳಾ ಮೇಲ್ವಿಚಾರಕಿ ಶ್ರೀಮತಿ ಶಾರದಾಬಾಯಿ ಅವಟೆ ಅವರನ್ನು ‘ಜಿಲ್ಲೆಯ ಅತ್ಯುತ್ತಮ ಮೇಲ್ವಿಚಾರಕಿ’ ಪ್ರಶಸ್ತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಶಾರದಾಬಾಯಿ ಅವಟೆ ಅವರು ಕಳೆದ 16 ವರ್ಷಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಅಫಜಲಪುರ ಹಾಗೂ ಮಣ್ಣೂರ ವಲಯಗಳಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲ್ವಿಚಾರಣೆಯಡಿ ಒಟ್ಟು 48 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ ‘ಪೋಷಣ ಟ್ರ್ಯಾಕರ್’ ತಂತ್ರಾಂಶದಲ್ಲಿ ಶೇ.100 ಸಾಧನೆ ಮಾಡಿರುವುದಕ್ಕಾಗಿ ಇಲಾಖೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
ಇದಲ್ಲದೆ, ಪೂರಕ ಪೌಷ್ಠಿಕ ಆಹಾರ, ಪ್ರಧಾನ ಮಂತ್ರಿ ಮಾತೃವಂದನ ಯೋಜನೆ, ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿ, ಪೋಷಣ ಅಭಿಯಾನ ಹಾಗೂ ಶಾಲಾ ಪೂರ್ವ ಶಿಕ್ಷಣ ಸೇರಿದಂತೆ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ತಾಲೂಕಿನ ಹಲವಾರು ಬಾಲ್ಯ ವಿವಾಹಗಳನ್ನು ತಡೆದು ಜಾಗೃತಿ ಮೂಡಿಸಿರುವುದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತರಬೇತಿ ನೀಡುವ ಮೂಲಕ ಇಲಾಖೆಯಲ್ಲಿ ಉತ್ತಮ ಛಾಪು ಮೂಡಿಸಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಅತ್ಯುತ್ತಮ ಮೇಲ್ವಿಚಾರಕಿಯಾಗಿ ಗುರುತಿಸಿಕೊಂಡ ಶಾರದಾಬಾಯಿ ಅವಟೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಅಫಜಲಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.