ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಗಿ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ
ಬಂದಿದೆ. ಈ ಅಕ್ರಮ ವಾಣಿಜ್ಯ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಅಕ್ರಮ ವಾಣಿಜ್ಯ ಚಟುವಟಿಕೆಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಪಾಲಿಕೆಗೆ ನಿರ್ದೇಶನ ನೀಡಿದ್ದಾರೆ.
ಪಾಲಿಕೆಯ ವಾರ್ಡ್‌ಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳ ನಡೆಯುವ ಸ್ಥಳಗಳನ್ನು ಗುರುತಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.