ಅಫಜಲಪೂರ, ಮೇ 31: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಅಫಜಲಪೂರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ್ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಕಾಶೀನಾಥ ಗಾಣುರ ಆಗ್ರಹಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ವೈ. ಪಾಟೀಲ್ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕನಾಗಿ ಅವರು ಕ್ಷೇತ್ರದ ಜನರ ವಿಶ್ವಾಸವನ್ನು ಗಳಿಸಿದ್ದಾರೆ ಎಂದು ಶ್ಲಾಘಿಸಿದರು.
ಅಫಜಲಪೂರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಎಂ.ವೈ. ಪಾಟೀಲ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಅವರ ಆಡಳಿತ ಅನುಭವ ಮತ್ತು ರಾಜಕೀಯ ಪ್ರೌಢಿಮೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಕ್ಷೇತ್ರದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರಕಬೇಕಾದ ಅಗತ್ಯವಿದೆ. ಆ ಭಾಗದ ಹಿರಿಯ ಮತ್ತು ಅನುಭವಿ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿರುವ ಎಂ.ವೈ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಗಂಭೀರವಾಗಿ ಚಿಂತನೆ ನಡೆಸಬೇಕು. ಇದರಿಂದ ಪಕ್ಷದ ಕಾರ್ಯಕರ್ತರ ಆಶಯ ಈಡೇರುವುದರ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳಿಗೂ ಸ್ಪಂದಿಸಿದಂತಾಗುತ್ತದೆ ಎಂದು ಮಂಜುಳಾ ಗಾಣುರ ಒತ್ತಾಯಿಸಿದರು.