ಬೀದರ್, ಜೂ.೧- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೆ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಕಾAತ್ ಹಿಪ್ಲಾಳಗಾವ್ ಅವರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆಕಾರರನ್ನುದ್ದೇಶಿಸಿ ಚಂದ್ರಕಾAತ್ ಹಿಪ್ಲಾಳಗಾವ್ ಅವರು ಮಾತನಾಡಿ, ಈಶ್ವರ ಖಂಡ್ರೆ ಅವರು ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನಪರ ಸೇವೆ ಸಲ್ಲಿಸಿದ್ದು, ಬಹುಭಾಷಾ ಪರಿಣಿತರಾಗಿದ್ದಾರೆ ಎಂದು ಹೇಳಿದರು. ಅಲ್ಲದೆ, ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿ, ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ, ಕರ್ನಾಟಕ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಹಿರಿಯ ಕಾಂಗ್ರೆಸ್ ನಾಯಕ ದಿ. ಭೀಮಣ್ಣ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ರಾಜಕೀಯವಾಗಿ ಬೆಳೆದಿರುವ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತವಾಗಿದ್ದು, ಇದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ.ಎಚ್. ಮುನಿಯಪ್ಪ ಅವರ ಸೇವೆಯನ್ನು ಸ್ಮರಿಸಿದ ಮುಖಂಡರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಎರಡು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿರುವ ಅವರು, ಪ್ರಸ್ತುತ ಕರ್ನಾಟಕ ರಾಜ್ಯ ಮಾದಿಗ ಮಹಾಸಭೆಯ ರಾಜ್ಯಾಧ್ಯಕ್ಷರಾಗಿ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಯೀಮ್ ಕಿರುಮಣಿ, ನಾಗೇಶ್ ಯೆರನಳ್ಳಿ, ಬಾಬುರಾವ್ ಸೂರ್ಯವಂಶಿ, ಮಾರುತಿ ಬರ್ಮಾ, ರಾಮಣ್ಣ ಉಜಿನಿ, ವಿನೋದ್ ಹಿಪ್ಪಳಗಾವ್, ವಿಲ್ಸನ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು