ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ರಾಜಕೀಯ ಬೆಳವಣಿಗೆ.

 

ಕಲಬುರಗಿ, ಜೂನ್ 5: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆಯ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸೇಡಂ ಕ್ಷೇತ್ರದ ಶಾಸಕ Dr. ಶರಣಾಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂತಸಕ್ಕೆ ಕಾರಣವಾಗಿದೆ.

ಸರಳತೆ, ಸಜ್ಜನಿಕೆ ಹಾಗೂ ಜನಪರ ಕಾರ್ಯಶೈಲಿಯಿಂದ ಗುರುತಿಸಿಕೊಂಡಿರುವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವಿ ರಾಜಕಾರಣಿಯಾಗಿದ್ದಾರೆ. 1967ರ ಏಪ್ರಿಲ್ 20ರಂದು ಕಲಬುರಗಿ ಜಿಲ್ಲೆಯ ಉಡಗಿಯಲ್ಲಿ ಜನಿಸಿದ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದಿದ್ದು, ಎಂಬಿಬಿಎಸ್ ಹಾಗೂ ಡರ್ಮಾಟಾಲಜಿಯಲ್ಲಿ ಎಂಡಿ ಪದವಿ ಪಡೆದಿದ್ದಾರೆ.

ವಿದ್ಯಾರ್ಥಿ ಜೀವನದಲ್ಲೇ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟ ಅವರು, ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡರು. 2004ರಲ್ಲಿ ಮೊದಲ ಬಾರಿಗೆ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಅವರು, 2008, 2013 ಹಾಗೂ 2023ರ ಚುನಾವಣೆಯಲ್ಲೂ ಗೆಲುವು ಸಾಧಿಸಿ ಕ್ಷೇತ್ರದ ಜನರ ವಿಶ್ವಾಸ ಗಳಿಸಿದ್ದಾರೆ.

2013ರಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು. ಸರ್ಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ ಆಸ್ಪತ್ರೆಗಳ ಅಭಿವೃದ್ಧಿ, ಆಧುನಿಕ ಆರೋಗ್ಯ ಸೌಲಭ್ಯಗಳ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದರು.

ಹಿಂದುಳಿದ ಪ್ರದೇಶಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ಆದ್ಯತೆ ನೀಡಿದ ಅವರು, ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆರೋಗ್ಯ ಸಂಸ್ಥೆ ಸ್ಥಾಪನೆಗೆ ನಿರಂತರ ಪ್ರಯತ್ನ ನಡೆಸಿದ್ದಾರೆ. ಆರೋಗ್ಯ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಕ್ಷೇತ್ರಗಳ ಅಭಿವೃದ್ಧಿಗೆ ಅವರ ಕೊಡುಗೆ ಗಮನಾರ್ಹವಾಗಿದೆ.

ರಾಜಕೀಯದ ಜೊತೆಗೆ ಓದು ಮತ್ತು ಫಿಟ್ನೆಸ್‌ಗೆ ಹೆಚ್ಚಿನ ಮಹತ್ವ ನೀಡುವ ಡಾ. ಶರಣಪ್ರಕಾಶ್ ಪಾಟೀಲ್ ಅವರು ದೂರದೃಷ್ಟಿಯ ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಆರೋಗ್ಯ ಸೇವೆಯ ಸುಧಾರಣೆ, ಯುವಕರಿಗೆ ಕೌಶಲ್ಯ ತರಬೇತಿ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಅವರ ಬದ್ಧತೆ ಮುಂದುವರಿದಿದೆ.

ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಡಾ. ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅನುಭವ ಮತ್ತು ಆಡಳಿತ ಕೌಶಲ್ಯದ ಮೂಲಕ ಹೊಸ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

Share This Article
Leave a Comment