ಕಲಬುರಗಿ ಜೂ. 6: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ಕಲಬುರಗಿ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಜಮಾದಾರ ಅವರನ್ನು ಆಯ್ಕೆ ಮಾಡಲಾಗಿದೆ.
ರೈತರ ಸಮಸ್ಯೆಗಳ ಪರಿಹಾರ, ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಮುಖಂಡರ ನೇತೃತ್ವದಲ್ಲಿ ಆಯ್ಕೆ ಮಾಡಿಲಾಗಿದೆ. ಮಹಾಂತೇಶ್ ಜಮಾದಾರ ಅವರು ಹಲವು ವರ್ಷಗಳಿಂದ ರೈತರ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಜಿಲ್ಲೆಯ ರೈತರ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಘಟನೆಯ ಪದಾಧಿಕಾರಿಗಳು, ರೈತ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅಭಿನಂದಿಸಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ದೊರೆಯುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯದಾದ್ಯಂತ ರೈತರ ಹಕ್ಕುಗಳಿಗಾಗಿ ವಿವಿಧ ಹೋರಾಟಗಳನ್ನು ನಡೆಸುತ್ತಿದ್ದು, ಸಂಘಟನೆಯ ಚಟುವಟಿಕೆಗಳನ್ನು ಜಿಲ್ಲಾಮಟ್ಟದಲ್ಲಿ ಮತ್ತಷ್ಟು ವಿಸ್ತರಿಸುವ ಸಂಕಲ್ಪವನ್ನು ನೂತನ ಜಿಲ್ಲಾಧ್ಯಕ್ಷರು ವ್ಯಕ್ತಪಡಿಸಿದ್ದಾರೆ.