
ಕಲಬುರಗಿ, ಜೂ.7: ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸಹಾಯಕ ಉಪನಿರೀಕ್ಷಕ (ಎಎಸ್‌ಐ) ಲಂಚ ಸ್ವೀಕರಿಸುತ್ತಿದ್ದ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಜ್ಯೋತಿ ಹಾಗೂ ಎಎಸ್‌ಐ ಶಿವಶರಣಪ್ಪ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ರೋಹಿಣಿನಗರ ನಿವಾಸಿಯೊಬ್ಬರು ಲೋಕಾಯುಕ್ತಕ್ಕೆ ನೀಡಿದ ದೂರಿನ ಪ್ರಕಾರ, ಪೊಲೀಸ್ ಪ್ರಕರಣವೊಂದರಲ್ಲಿ ಸಹಾಯ ಮಾಡುವುದಾಗಿ ಹೇಳಿ ಆರೋಪಿಗಳು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆರಂಭದಲ್ಲಿ ರೂ.1,500 ನೀಡುವಂತೆ ಹೇಳಲಾಗಿದ್ದು, ಅದರಲ್ಲಿ ರೂ.1,000 ಅನ್ನು ಸಾರ್ವಜನಿಕ ಅಭಿಯೋಜಕರಿಗೆ (ಪಿ.ಪಿ.) ನೀಡಬೇಕಾಗಿದೆ ಎಂದು ಹೇಳಿ ಲಂಚವಾಗಿ ಸ್ವೀಕರಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಂತರ ಪ್ರಕರಣದಲ್ಲಿ ಅನುಕೂಲ ಮಾಡಿಕೊಡುವುದಾಗಿ ಹೇಳಿ ಎಎಸ್‌ಐ ಶಿವಶರಣಪ್ಪ ಹಾಗೂ ಪಿಸಿ ಜ್ಯೋತಿ ತಲಾ ರೂ.5,000ರಂತೆ ಒಟ್ಟು ರೂ.10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ದೂರುದಾರರು ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿ, ಹಣವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಇಲಾಖೆಯ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರ ಪೊಲೀಸ್ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ವಲಯದಲ್ಲಿಯೂ ಗಮನ ಸೆಳೆದಿದೆ.