ಕಲಬುರಗಿ, ಜೂ.12: ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಮಕ್ಕಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಬಾಲಕಾರ್ಮಿಕ ಪದ್ಧತಿಯು ದೇಶದ ಪ್ರಗತಿಗೆ ದೊಡ್ಡ ಅಡ್ಡಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಹೇಳಿದರು.
ನಗರದ ಸೇಂಟ್ ಮೇರಿ ಪದವಿ ಪೂರ್ವ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ವಿವಿಧ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸುವುದನ್ನು ನಿಷೇಧಿಸಲಾಗಿದೆ.
ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳು ತಮ್ಮ ಅಮೂಲ್ಯ ಬಾಲ್ಯವನ್ನು ಕಳೆದುಕೊಳ್ಳುವುದರ ಜೊತೆಗೆ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣವೇ ವ್ಯಕ್ತಿ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಪ್ರಮುಖ ಅಸ್ತ್ರವಾಗಿದ್ದು, ಅದರ ಮೂಲಕವೇ ದೇಶದ ಉನ್ನತಿ ಸಾಧ್ಯ ಎಂದು ತಿಳಿಸಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಅನೇಕ ಸಂಕಷ್ಟಗಳ ನಡುವೆಯೂ ಉನ್ನತ ಶಿಕ್ಷಣ ಪಡೆದು ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ ಮಹನೀಯರು. ಅವರ ಜೀವನವು ಶಿಕ್ಷಣದ ಮಹತ್ವವನ್ನು ಸಾರುತ್ತದೆ ಎಂದು ಸ್ಮರಿಸಿದರು.
ಬಾಲಕಾರ್ಮಿಕ ಪದ್ಧತಿಗೆ ಬಡತನ ಪ್ರಮುಖ ಕಾರಣವಾಗಿದ್ದು, ಇಂತಹ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳು ಪರಿಣಾಮಕಾರಿಯಾಗಿ ತಲುಪಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ; ಪ್ರತಿಯೊಬ್ಬ ನಾಗರಿಕರೂ ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವಾರಾಧ್ಯ ಇಜೇರಿ ಮಾತನಾಡಿ, ಬಾಲಕಾರ್ಮಿಕ ಹಾಗೂ ಭಿಕ್ಷಾಟನೆ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಶಿಕ್ಷಣ ಮತ್ತು ಹಕ್ಕುಗಳನ್ನು ಕಸಿದುಕೊಳ್ಳುವುದು ಕಾನೂನುಬಾಹಿರವಾಗಿದ್ದು, ವಲಸೆ ಮಕ್ಕಳನ್ನು ಗುರುತಿಸಿ ಅವರಿಗೆ ಶಿಕ್ಷಣ ಕಲ್ಪಿಸಲು ಸರ್ಕಾರ ಮತ್ತು ಸಮಾಜ ಒಟ್ಟಾಗಿ ಶ್ರಮಿಸಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪ ಆರ್. ಹಳಿಮನಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಹಾಗೂ 15 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ತೊಡಗಿಸುವುದು ಕಾನೂನುಬಾಹಿರವಾಗಿದೆ. ನಿಯಮ ಉಲ್ಲಂಘಿಸುವ ಮಾಲೀಕರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.
ಇದಕ್ಕೂ ಮುನ್ನ ನ್ಯಾಯಾಧೀಶ ಶ್ರೀನಿವಾಸ ನವಲೆ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸೇಂಟ್ ಮೇರಿ ಶಾಲೆಯವರೆಗೆ ಸಂಚರಿಸಿತು.
ಸಂತ ಜೋಸೆಫ್ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಿಎಚ್‌ಒ ಡಾ. ಶರಣಬಸಪ್ಪ ಕ್ಯಾತ್ನಾಳ, ಉಪ ಕಾರ್ಮಿಕ ಆಯುಕ್ತ ಡಾ. ವೆಂಕಟೇಶ್ ಎ. ಶಿಂಥಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತ ಮಹಮ್ಮದ್ ಬಶೀರ್ ಅನ್ಸಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ವಿ. ಪಾಟೀಲ್, ಫಾದರ್ ಜೋಸೆಫ್ ಪ್ರವೀಣ್, ಆನಂದರಾಜ್, ಶಿವಕುಮಾರ ರೇಷ್ಮೆ, ವಿಠ್ಠಲ ಚಿಕ್ಕಣಿ, ಸಂತೋಷ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.