ಅಫಜಲಪುರ, ಜೂ. 13: ತಾಲೂಕಿನ ಕರಜಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದಡಿ ಗ್ರೂಪ್ ನೌಕರರಾಗಿದ್ದ ಜಾವಿದ್ ಸೈಫನ್‌ಸಾಬ್ ಅತ್ತಾರ (38) ಅವರು ವಿದ್ಯುತ್ ತಂತಿ ತಗುಲಿ ಶುಕ್ರವಾರ ಮೃತಪಟ್ಟಿದ್ದಾರೆ.
ಮನೆ ಕೆಲಸದ ನಿಮಿತ್ತ ಕಾರ್ಯನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಜಾವಿದ್ ಅತ್ತಾರ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.