ಹಲ್ಲಿ ಬಿದ್ದ ನೀರು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಕಲಬುರಗಿ, ಜೂ.15: ನಗರದ ಗುಲ್ಬರ್ಗ ಯುನಿವರ್ಸಿಟಿ ವ್ಯಾಪ್ತಿಯ ಬಿಸಿಎಂ ಸ್ನಾತಕೋತ್ತರ ವಿದ್ಯಾರ್ಥಿ ವಸತಿ ನಿಲಯದಲ್ಲಿ ಹಲ್ಲಿ ಬಿದ್ದಿರುವ ನೀರು ಸೇವಿಸಿದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ವಸತಿ ನಿಲಯದ ನೀರಿನ ಟ್ಯಾಂಕ್‌ನಲ್ಲಿ ಹಲ್ಲಿ ಸತ್ತು ಬಿದ್ದಿದ್ದರೂ ಅದೇ ನೀರನ್ನು ವಿದ್ಯಾರ್ಥಿಗಳು ಕುಡಿದಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಟ್ಯಾಂಕ್‌ನ ನೀರನ್ನೇ ಬಳಸಿಕೊಂಡು ಅಡುಗೆ ತಯಾರಿಸಲಾಗಿದ್ದು, ಇದರಿಂದ 20ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಸುಸ್ತು, ವಾಂತಿ ಹಾಗೂ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಬಹುತೇಕ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿತ ಅಧಿಕಾರಿಗಳು ಹಾಗೂ ವಸತಿ ನಿಲಯದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನ ಟ್ಯಾಂಕ್ ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಕುರಿತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Share This Article
Leave a Comment