ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಅವರ ಪತಿ, ನಿವೃತ್ತ ಐಎಎಸ್ ಅಧಿಕಾರಿ ಮತ್ತು ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ವಿರುದ್ಧ ಸಾರ್ವಜನಿಕ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ ಕೇಳಿಬಂದಿದೆ. ಈ ಸಂಬಂಧ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ದೂರಿನಲ್ಲಿ ತಿಳಿಸಿರುವಂತೆ, ಎಚ್‌ಎಸ್‌ಆರ್ ಲೇಔಟ್‌ನ ಸೆಕ್ಟರ್-6ರಲ್ಲಿ ಇರುವ ಆಸ್ತಿಯ ಜಂಟಿ ಖಾತೆದಾರರಾಗಿರುವ ಶಾಲಿನಿ ರಜನೀಶ್ ಮತ್ತು ರಜನೀಶ್ ಗೋಯೆಲ್ ಅವರು ಮಂಜೂರಾದ ಆಸ್ತಿ ಗಡಿಯನ್ನು ಮೀರಿ ಸಾರ್ವಜನಿಕ ಪಾದಚಾರಿ ಮಾರ್ಗ ಹಾಗೂ ಸ್ಥಳೀಯ ಸಂಸ್ಥೆಗೆ ಸೇರಿದ ನಾಗರಿಕ ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಬಿಎಂಟಿಎಫ್ ಪೊಲೀಸ್ ಠಾಣೆ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಸಲಾದ ದೂರಿನಲ್ಲಿ, ಅತಿಕ್ರಮಣದ ಕುರಿತು ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಸಾರ್ವಜನಿಕರ ಬಳಕೆಗೆ ಮೀಸಲಾಗಿರುವ ಪಾದಚಾರಿ ಮಾರ್ಗವನ್ನು ಖಾಸಗಿ ಉದ್ದೇಶಕ್ಕೆ ಬಳಸಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆಯ ನಂತರವೇ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಈ ಬೆಳವಣಿಗೆ ಆಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಿಎಂಟಿಎಫ್ ಅಧಿಕಾರಿಗಳು ದೂರಿನ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.