ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಜೂನ್ 21ರಂದು ನಡೆಯಲಿರುವ ನೀಟ್ (NEET) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಸುಸೂತ್ರವಾಗಿ ಹಾಗೂ ಕಟ್ಟುನಿಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಸಿದ್ಧತೆಗಳ ಕುರಿತು ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ವಿವಿಧ ಭಾಗಗಳಲ್ಲಿರುವ ಸುಮಾರು 20 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದ್ದು, 9 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.
ಪರೀಕ್ಷೆಗೆ ಮುನ್ನ ಅಧಿಕಾರಿಗಳು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಆಸನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಲಭ್ಯಗಳು ಸಮರ್ಪಕವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಯಾವುದೇ ರೀತಿಯ ಅಕ್ರಮ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಕೇಂದ್ರಗಳ ಸುತ್ತ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ಅಭ್ಯರ್ಥಿಗಳು ಮೊಬೈಲ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತರಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಡಿಸಿಪಿ ಶಾಲೂ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರೊಬೇಷನರ್ ಐಎಎಸ್ ಅಧಿಕಾರಿ ಶಿಖರ್ ಮೋಘಾ, ಪರೀಕ್ಷೆಯ ನಗರ ಸಂಯೋಜಕರಾದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಭೂಪೇಂದ್ರ, ವಿಟಿಯು ಪ್ರಾಧ್ಯಾಪಕ ಶಂಭುಲಿಂಗ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.