ಕಲಬುರ್ಗಿ, ಜೂ.೧೮- ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಶಹಾಪುರ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪ ದರ್ಶನಾಪೂರ್ ಅವರನ್ನು ಎರಡನೇ ಹಂತದ ಸಂಪುಟ ರಚನೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಅಭಿಮಾನಿ ಬಳಗದ ಅಖಿಲ ದೊಡ್ಡಮನಿ ಅವರು ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡನೇ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಶರಣಬಸಪ್ಪ ದರ್ಶನಾಪುರ ಅವರಿಗೆ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ನಮಗಿದೆ. ಈ ಸಂಬAಧ ನಗರದ ಐತಿಹಾಸಿಕ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಸುಮಾರು ೧೦೧ ಈಡುಗಾಯಿಗಳನ್ನು ಒಡೆಯುವ ಹರಕೆ ಒಪ್ಪಿಸುವುದಾಗಿ ತಿಳಿಸಿದರು.
ದರ್ಶನಾಪುರ ಅವರು ಸುಮಾರು ಐದು ಬಾರಿ ಶಾಸಕರಾಗಿ, ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಸಜ್ಜನಿಕೆಯ ರಾಜಕಾರಣೆಯಾಗಿದ್ದು ಮೂರು ಬಾರಿ ಸಚಿವರಾದರು ಕೂಡ ಯಾವುದೇ ಒಂದು ಕಪ್ಪು ಚುಕ್ಕೆ ಇರಲಾರದೆ ತಮ್ಮ ಕೆಲಸ ನಿರ್ವಹಿಸಿದ್ದಾರೆ. ಅವರು ಹಿರಿಯ ಸಚಿವರಾಗಿದ್ದು ಅವರಿಗೆ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದಲ್ಲಿ ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಕೊಡಬೇಕಾಗಿತ್ತು. ಆದರೆ ಕೊಟ್ಟಿಲ್ಲ ಎಂದು ಬೇಸರ ಹೊರಹಾಕಿದ ಅವರು, ಎರಡನೇ ಪಟ್ಟಿಯಲ್ಲಾದರೂ ಸಂಪುಟ ದರ್ಜೆಯ ಸಚಿವ ಸ್ಥಾನ ಕೊಡಬೇಕು ಎಂದು ಕೋರಿದರು.
ದರ್ಶನಾಪುರ ಅವರು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಪರವಾಗಿ ಜನರಿಗೋಸ್ಕರ ಅನೇಕ ಕೆಲಸ ಮಾಡಿದ್ದಾರೆ ಮತ್ತು ಸಾಮಾಜಿಕ ಎಲ್ಲ ಜನರ ಏಳಿಗೆಗಾಗಿ ಹಾಗೂ ರೈತರ ಬಗ್ಗೆ ಕಾಳಜಿ ಉಳ್ಳವರಾಗಿ ಉತ್ತಮ ಕೆಲಸಗಾರರು. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅಪಾರ ಕೊಡುಗೆ ನೀಡಿದ್ದಾರೆ. ಹೀಗಾಗಿ ಅವರಿಂದ ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳನ್ನು ಸಹಕಾರಿಯಾಗಿದೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ವರಿಷ್ಠರಾದ ರಾಹುಲ್‌ಗಾಂಧಿ, ಸೋನಿಯಾಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾಗಿ ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಲ್ಲಾರೆಡ್ಡಿ, ಶಿವಾನಂದ್, ರಮೇಶ್ ಪಾಟೀಲ್, ಶ್ರೀಮತಿ ವಿಶಾಲಾಕ್ಷಿ ಕರೆಡ್ಡಿ, ಮಹೇಶ ಹೊಸೂರಕರ್ ಮುಂತಾದವರು ಉಪಸ್ಥಿತರಿದ್ದರು.