ಕಲಬುರ್ಗಿ, ಜೂ.೧೮- ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ಜಿಲ್ಲೆಯ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂನ್ ೨೦ರಂದು ಸಂಜೆ ೪.೩೦ಕ್ಕೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಅವರು ತಿಳಿಸಿದ್ದಾರೆ.
ಸಂಘಕ್ಕೆ ಆಯ್ಕೆ ಶಿಕ್ಷಕರು, ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳನ್ನು ಜ್ಞಾನವಂತರನ್ನಾಗಿ ಮಾಡುವುದರ ಜತೆಗೆ ನೈತಿಕ ಮೌಲ್ಯಗಳನ್ನು ಕಲಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತಿದ್ದಾರೆ. ಅದರ ಜತೆಗೆ ಸಂಘದ ಜವಾಬ್ದಾರಿಯನ್ನು ಅರಿತುಕೊಂಡು ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವ ಜವಾಬ್ದಾರಿಯೂ ಸಹ ಸಂಘದ ಪದಾಧಿಕಾರಿಗಳ ಮೇಲಿದೆ. ಶಿಕ್ಷಕರು ಪರಿಷತ್ತಿಗೆ ಬಹು ದೊಡ್ಡ ಶಕ್ತಿಯಾಗಿದ್ದಾರೆ. ಹಾಗಾಗಿ ಅವರನ್ನು ಅಭಿನಂದಿಸುವುದು ಪರಿಷತ್ತಿನ ಕರ್ತವ್ಯವಾಗಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್. ಸಂಕನೂರ್ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ್ ಬಳೂಂಡಗಿ, ಜಿಲ್ಲಾ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ಹೂಗಾರ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮರಾಜ್ ಜವಳಿ, ಪರಿಷತ್ ತಾಲ್ಲೂಕು ಅಧ್ಯಕ್ಷೆ ಶಿವಲೀಲಾ ಕಲಗುರ್ಕಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಅವರು ತಿಳಿಸಿದ್ದಾರೆ.