ಅಫಜಲಪುರ: ತಾಲೂಕಿನ ಗೊಬ್ಬುರ (ಬಿ) ಗ್ರಾಮ ಪಂಚಾಯತಿಯಲ್ಲಿ ಕರ ವಸೂಲಿ, ನರೇಗಾ ಯೋಜನೆ, ಕುಡಿಯುವ ನೀರು ಸೇರಿದಂತೆ ವಿವಿಧ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿ ಕೂಲಿ ಕಾರ್ಮಿಕರು, ರೈತರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತ ಮಾಜಿ ಸದಸ್ಯ ಹುಣಚಪ್ಪ ಮೈನಾಳ , ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಅನೇಕ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಉದ್ಯೋಗ ನೀಡುತ್ತಿಲ್ಲ. ಗ್ರಾಮೀಣ ಭಾಗದ ಬಡ ಕುಟುಂಬಗಳು ಕೆಲಸಕ್ಕಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯೋಗ ಖಾತರಿ ಯೋಜನೆಯ ಮೂಲ ಉದ್ದೇಶವೇ ವಿಫಲವಾಗುತ್ತಿದೆ ಎಂದು ಆರೋಪಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಹಲವು ಬಡಾವಣೆಗಳಲ್ಲಿ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಮಹಿಳೆಯರು ಮತ್ತು ವೃದ್ಧರು ನೀರಿಗಾಗಿ ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಬೇಸಿಗೆ ಆರಂಭವಾದಾಗಲೇ ಸಮಸ್ಯೆ ಉಲ್ಬಣಗೊಂಡಿದ್ದರೂ ಪಂಚಾಯತ್ ಆಡಳಿತ ಯಾವುದೇ ಶಾಶ್ವತ ಪರಿಹಾರ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಲ್ಲದೆ, ಮನೆ ತೆರಿಗೆ ಹಾಗೂ ಇತರ ಕರ ವಸೂಲಿಯಲ್ಲಿ ಬಡವರು ಮತ್ತು ಶ್ರೀಮಂತರ ನಡುವೆ ಬೇಧಭಾವ ಮಾಡಲಾಗುತ್ತಿದೆ. ಕೆಲವು ಪ್ರಭಾವಿ ವ್ಯಕ್ತಿಗಳಿಂದ ಕರ ವಸೂಲಿ ಮಾಡದೇ ಸಾಮಾನ್ಯ ಜನರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪಂಚಾಯತ್ ಆಡಳಿತದಲ್ಲಿ ಪಾರದರ್ಶಕತೆ ಕೊರತೆಯಿದ್ದು, ಸಾರ್ವಜನಿಕ ಹಣದ ಬಳಕೆ ಕುರಿತು ಅನುಮಾನಗಳು ಮೂಡಿವೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.ಗ್ರಾಮದಲ್ಲಿ ಬೀದಿ ದೀಪಗಳ ನಿರ್ವಹಣೆ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಕಸದ ವಿಲೇವಾರಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯೂ ಕಂಡುಬರುತ್ತಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದುಎಂದು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಭಜೇಂತ್ರಿ ಯವರಿಗೆ ಎಚ್ಚರಿಕೆ ನೀಡಿದರು. ಅಲ್ಲದೆ, ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಒಂದು ವಾರದ ಗಡುವು ನೀಡಿ, ಗಡುವಿನೊಳಗೆ ಕ್ರಮ ಕೈಗೊಳ್ಳದಿದ್ದರೆ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಹುಣಚಪ್ಪ ಮೈನಾಳ, ಖಾದರ್ ಸಾಬ್ ಆಂದೋಲ, ಬಾಸುಮಯ್ಯ ಸರ್ಕಸ್ ಪ್ಯಾಟಿ , ಸಾತಲಿಂಗಪ್ಪ ನಂದೂರ, ಶಿವಾನಂದ ಕೌಲಗಿ, ಸೋಮಣ್ಣ ಕಲಬುರಗಿ, ಪ್ರಭುಲಿಂಗ ಹುಣಸಿಹಡಲಗಿ, ಮಂಜುನಾಥ ಸರಡಗಿ, ಶಿವು ಕುಸಾಳ, ಶಿವಕುಮಾರ ವಾಗ್ಮಡಿ, ಮೋಸಿನ್ ಜಮಾದಾರ, ಗೋವಿಂದ, ಶರಣು ಕೊತ್ವಾಳ, ಲಚ್ಚಪ್ಪ ನಾಟಿಕಾರ, ಹುಸೇನಿ ವಾಗ್ಮಡೆ, ಯಲ್ಲಪ್ಪ ವಾಗ್ಮಡೆ, ಯಲ್ಲಪ್ಪ ಸಂಡಗಿ, ದಸ್ತಗೀರ್ ಬಾಸಗಿ, ರಫೀಕ್ ಬಂದರವಾಡ, ರಾಮಣ್ಣ ಮೈಂದರಗಿ, ಶ್ರೀಶೈಲ ಬಂತನಾಳ, ಚಂದ್ರಕಾಂತ ಬೆಣ್ಣೆಶಿರೂರ, ಮಲ್ಲಿಕಾರ್ಜುನ ಸೇರಿದಂತೆ ಅನೇಕ ಗಣ್ಯರು, ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.